ಉತ್ತಮ ಸಮಾಜಕ್ಕಾಗಿ

ಸಂಗೊಳ್ಳಿ ರಾಯಣ್ಣ ಉತ್ಸವ ಜ.27ರಿಂದ ಪ್ರಚಾರ ಸಾಮಗ್ರಿ ಬಿಡುಗಡೆ; ಮುಖ್ಯಮಂತ್ರಿಗಳಿಂದ ಉತ್ಸವಕ್ಕೆ ಚಾಲನೆ

0

ಬೆಳಗಾವಿ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಜನವರಿ 27 ಹಾಗೂ 28ರಂದು ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಜ.24) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ವರ್ಷ ಕೂಡ ಅತ್ಯಂತ ಸಡಗರ-ಸಂಭ್ರಮದಿಂದ ಉತ್ಸವವನ್ನು ಆಚರಿಸಲಾಗುವುದು ಎಂದರು.
ಸಂಗೊಳ್ಳಿಯ ಪ್ರೌಢಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆಯಲ್ಲಿ ಉತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27ರಂದು ಸಂಜೆ 6.30ಕ್ಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ರಾಯಣ್ಣ ಪ್ರತಿಮೆಗೆ ಪೂಜೆ:ಸಂಗೊಳ್ಳಿ ರಾಯಣ್ಣ ದೇವಸ್ಥಾನದಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಂದು ಬೆಳಿಗ್ಗೆ 6 ಗಂಟೆಗೆ ಪೂಜೆ ಸಲ್ಲಿಸಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿ, ರಾಯಣ್ಣ ಪ್ರತಿಮೆ ಮಾಲಾರ್ಪಣೆ ಮಾಡಲಿದ್ದಾರೆ.
ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಗಣೇಶ ಹುಕ್ಕೇರಿ ಅವರು ರಾಯಣ್ಣ ಜ್ಯೋತಿ ಹಾಗೂ ಯುವ ಜಾಗೃತಿ ರಥಯಾತ್ರೆಯನ್ನು ಬರಮಾಡಿಕೊಳ್ಳಲಿದ್ದಾರೆ.

ಜಾನಪದ ಕಲಾವಾಹಿನಿ:ಉತ್ಸವದ ಮೊದಲ ದಿನವಾದ ಜ.27ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ ಅವರು ಜಾನಪದ ಕಲಾವಾಹಿನಿಯನ್ನು ಉದ್ಘಾಟಿಸಲಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆಯ ಬಳಿ 11 ಗಂಟೆಗೆ ಸಂಸದ ಸುರೇಶ ಅಂಗಡಿ ಅವರು ವಸ್ತುಪ್ರದರ್ಶನಕ್ಕೆ ಚಾಲನೆ ನೀಡುವರು.

ಮಧ್ಯಾಹ್ನ 3 ಗಂಟೆಗೆ ನೂತನ ಕುಸ್ತಿ ಕಣದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅಶೋಕ ಪಟ್ಟಣ ಅವರು ಕಣವನ್ನು ಉದ್ಘಾಟಿಸಲಿದ್ದು, ಜಿಪಂ ಸದಸ್ಯ ಅನೀಲ ಮೇಕಲಮರಡಿ ಅವರು ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡುವರು.
ಜ.27ರಂದು ರಾತ್ರಿ 9 ಗಂಟೆಗೆ ವೀರರ ಸ್ಮರಣೆಗಾಗಿ ದೀಪೋತ್ಸವ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶೈಲಾ ಶಿದ್ರಾಮಣಿ ಚಾಲನೆ ನೀಡಲಿದ್ದಾರೆ.

28ರಂದು ಸಮಾರೋಪ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಸಮಾರೋಪ ಸಮಾರಂಭ ಜ.28ರಂದು ಸಂಜೆ 7 ಗಂಟೆಗೆ ನಡೆಯಲಿದ್ದು, ಹಿರಿಯ ಸಾಹಿತಿ ಸರಜೂ ಕಾಟ್ಕರ್ ಸಮಾರೋಪ ಭಾಷಣ ಮಾಡಲಿದ್ದಾರೆ.
ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉಪಸ್ಥಿತರಿರುವರು. ಶಾಸಕ ಡಿ.ಬಿ.ಇನಾಮದಾರ ಅತಿಥಿಗಳಾಗಿ ಆಗಮಿಸಲಿದ್ದು, ಶಾಸಕ ಡಾ.ವಿಶ್ವನಾಥ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಎರಡು ದಿನಗಳ ಉತ್ಸವದಲ್ಲಿ ಭಜನೆ, ಸುಗಮ ಸಂಗೀತ, ರಸಮಂಜರಿ, ಶಹನಾಯಿ ವಾದನ, ಸಂಗೀತ ಮತ್ತು ನೃತ್ಯ ರೂಪಕ ಸೇರಿದಂತೆ ಅನೇಕ ಸಾಂಸ್ಕøತಿಕ ಕಾರ್ಯಕ್ರಮಗಳು, ಕುಸ್ತಿ ಪಂದ್ಯಾವಳಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ವಿವರಿಸಿದರು.
ಈ ಬಾರಿ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇರುವುದರಿಂದ ಉತ್ಸವದ ವೇಳೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಜಿಲ್ಲಾಡಳಿತದ ವತಿಯಿಂದ ಕಲ್ಪಿಸಲಾಗಿದ್ದು, ಉತ್ಸವದ ಯಶಸ್ಸಿಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿ ಎನ್.ಜಯರಾಮ್ ಬಿಡುಗಡೆಗೊಳಿಸಿದರು.
ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.