ಉತ್ತಮ ಸಮಾಜಕ್ಕಾಗಿ

ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಉಪಮುಖ್ಯಮಂತ್ರಿ ಸ್ಥಾನ

0

ತುಮಕೂರು/ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್, ರವಿವಾರ ತುಮಕೂರಿನಲ್ಲಿ ಅಲ್ಪಸಂಖ್ಯಾತರ ಬೃಹತ್ ಶಕ್ತಿ ಪ್ರದರ್ಶನವನ್ನು ನಡೆಸಿತು. ಸಮಾವೇಶಕ್ಕೆ ನಾಡಿನ ಮೂಲೆ ಮೂಲೆಗಳಿಂದ ಜನಸಾಗರ ಹರಿದುಬಂದಿತ್ತು. ಕರಾವಳಿ, ಉತ್ತರ ಕರ್ನಾಟಕ ಹಾಗೂ ಬೆಂಗಳೂರಿನಿಂದ ಪಕ್ಷದ ಕಾರ್ಯಕರ್ತರು ತಂಡೋಪ ತಂಡವಾಗಿ ತುಮಕೂರಿಗೆ ಆಗಮಿಸಿದ್ದರು. ರವಿವಾರ ಮಧ್ಯಾಹ್ನ ನಡೆದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಜನಸಾಗರವೇ ಹರಿದುಬಂದು ಜೆಡಿಎಸ್‍ನ ಭದ್ರಕೋಟೆಯಾದ ತುಮಕೂರಿನಲ್ಲಿ ಶಕ್ತಿಪ್ರದರ್ಶನ ನಡೆಸಲಾಯಿತು.ತುಮಕೂರಿನ ಸರ್ಕಾರಿ ಕಿರಿಯ ಕಾಲೇಜು ಮೈದಾನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಆಯೋಜಿಸಿದ್ದ ಸಮಾವೇಶದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ, ಹಿರಿಯರಾದ ಹೆಚ್. ವಿಶ್ವನಾಥ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಒಲವು ರಾಜ್ಯದ ಜನರಲ್ಲಿ ಕಂಡುಬರುತ್ತಿದೆ. ಹೀಗಾಗಿ ಜೆಡಿಎಸ್‍ಗೆ ಅಧಿಕಾರ ಸಿಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಯಾಗುವುದು ಶತಸಿದ್ದ ಎಂದು ಪಕ್ಷದ ನಾಯಕರು ಪ್ರತಿಪಾದಿಸಿದರು.ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಆಡಳಿತಾವ ಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಮಾಡಿದ ಕಾರ್ಯಗಳನ್ನು ಪ್ರಶಂಸಿಸಲಾಯಿತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅಲ್ಪಸಂಖ್ಯಾತರಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಿ ಆ ವರ್ಗದ ಅಭಿವೃದ್ದಿಗೆ ಪ್ರಯತ್ನಿಸಲಾಗಿತ್ತು. ಆದರೆ ಆಡಳಿತರೂಢ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕೇವಲ ಮತ ಬ್ಯಾಂಕ್‍ನ್ನಾಗಿ ಪರಿಗಣಿಸಿದೆ ಎಂದು ಟೀಕಿಸಲಾಯಿತು. ರಾಷ್ಟ್ರೀಯ ಪಕ್ಷವಾದ ಬಿಜೆಪಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಲಾಯಿತು.

ಇದೇ ಸಂದರ್ಭದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ನಾಡಿನ ಜನರಿಗೆ ನೀಡುವ ಭರವಸೆಗಳ ಮಹಾಪೂರವನ್ನೇ ಹರಿಸಲಾಯಿತು. ಅಧಿಕಾರಕ್ಕೆ ಬಂದ 24 ಗಂಟೆಯೊಳಗಾಗಿ ಸಾಲ ಮನ್ನಾ ಮಾಡುವ ಘೋಷಣೆ, ವಿಧವೆಯರು, ವಯೋವೃದ್ಧರ ಮಾಶಾಸನವನ್ನು 5 ಸಾವಿರಕ್ಕೆ ಹೆಚ್ಚಳ ಮಾಡುವ ಘೋಷಣೆ ಮಾಡಲಾಯಿತು. ಅಲ್ಪಸಂಖ್ಯಾತರ ಆರ್ಥಿಕ , ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆಯೂ ಕೂಡ ಪ್ರಸ್ತಾಪಿಸಲಾಯಿತು. ಜೆಡಿಎಸ್ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡುವ ಭರವಸೆಯನ್ನು ನೀಡಲಾಯಿತು. ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.