ಉತ್ತಮ ಸಮಾಜಕ್ಕಾಗಿ

ಹುಣಶಿಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಓ ಭೇಟಿ

0

ಬೆಳಗಾವಿ: ಬೈಲಹೊಂಗಲ ತಾಲೂಕಿನ ಹುಣಶಿಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಡಿಸೆಂಬರ್ 26 ರಂದು ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯವರಿಗೆ ಸ್ವಚ್ಛ ಭಾರತ ಅಭಿಯಾನದಡಿ ಸಲಹೆ ಸೂಚನೆಗಳನ್ನು ನೀಡಿದರು.

ಶೌಚಾಲಯದ ಮಹತ್ವ :
ಶೌಚಾಲಯ ಇಲ್ಲದೆ ಇರುವ ಕುಟುಂಬದವರು ಸರ್ಕಾರ ನೀಡುವ ಪ್ರೋತ್ಸಾಹಧನ ಉಪಯೋಗಿಸಿಕೊಂಡು ಶೌಚಾಲಯ ನಿರ್ಮಿಸಿಕೊಳ್ಳಬೇಕು. ಎಸ್.ಸಿ, ಎಸ್.ಟಿಯವರಿಗೆ ರೂ. 15000 ಹಾಗೂ ಇತರರಿಗೆ ರೂ. 12000 ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ತಿಳಿಸಿ, ಸರ್ಕಾರದಿಂದ ದೊರೆಯುವ ಪ್ರೋತ್ಸಾಹಧನದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಮತ್ತು ಅವರ ಮನವೊಲಿಸಿ ಶೌಚಾಲಯ ನಿರ್ಮಿಸಿಕೊಳ್ಳುವಂತೆ ನೋಡಿಕೊಳ್ಳಬೇಕೆಂದು ಅವರು ಸೂಚಿಸಿದರು.
ಗರ್ಭಿಣಿಯರು ಕಡ್ಡಾಯವಾಗಿ ಶೌಚಾಲಯಗಳನ್ನು ಬಳಸಬೇಕು ಮತ್ತು ಕಾಲುಗಳಲ್ಲಿ ಚಪ್ಪಲಿಗಳನ್ನು ಧರಿಸಿಕೊಂಡು ಓಡಾಡಬೇಕು ಹಾಗೂ ಸಾಬೂನಿನಿಂದ ಚೆನ್ನಾಗಿ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ವೈಯಕ್ತಿಕ ಸ್ವಚ್ಚತೆ ಬಗ್ಗೆ ಗಮನಹರಿಸಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿಯರನ್ನು ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೌಷ್ಠಿಕ ಆಹಾರ ತೆಗೆದುಕೊಳ್ಳುವಂತೆ ಕ್ರಮ ಜರುಗಿಸುವುದು. ಎಲ್ಲ ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯಿಂದ ದೊರೆಯುವ ಉಚಿತ ಸೇವಾ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಆಶಾ ಕಾರ್ಯಕರ್ತೆಯರನ್ನು ಒಳಗೊಂಡ ಜಿಲ್ಲಾ ಪಂಚಾಯತ ಎಸ್.ಬಿ.ಎಂ. ಗುಲಾಬಿ ಗ್ಯಾಂಗ್, ವಾಟ್ಸ್ ಅಫ್ ಗ್ರೂಫ್ ರಚಿಸಿಕೊಂಡಿದ್ದು, ಇದರ ಮೂಲಕ ಶೌಚಾಲಯದ ಮಹತ್ವವನ್ನು ತಿಳಿಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು. ನಂತರ ಪ್ರಾ.ಆ.ಕೇಂದ್ರದ ಒಳ ಮತ್ತು ಹೊರ ಆವರಣ ಹಾಗೂ ಔಷಧ ಉಗ್ರಾಣ ಪರಿಶೀಲನೆ ಮಾಡಿ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಆರೋಗ್ಯ ಕಾರ್ಯಕರ್ತರು, ಸಿಬ್ಬಂದಿಗಳು ಹಾಜರಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.