ಉತ್ತಮ ಸಮಾಜಕ್ಕಾಗಿ

ವಿಜೃಂಭಣೆಯ ಗಣರಾಜ್ಯೋತ್ಸವ: ಜಿಲ್ಲಾಧಿಕಾರಿ ಜಿಯಾವುಲ್ಲಾ

0

ಬೆಳಗಾವಿ: ಗಣರಾಜ್ಯೋತ್ಸವವನ್ನು ಪ್ರತಿವರ್ಷದಂತೆ ಜಿಲ್ಲಾ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ(ಜ.5) ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಸಚಿವರ ಸಂದೇಶದ ಬಳಿಕ ಸ್ವಾತಂತ್ರ್ಯಯೋಧರಿಗೆ ಸನ್ಮಾನ ನಡೆಯಲಿದ್ದು, ನಂತರ ಶಾಲಾ ಮಕ್ಕಳು ದೇಶಭಕ್ತಿಗೀತೆಗೆ ಸಾಮೂಹಿಕ ನೃತ್ಯ ಪ್ರದರ್ಶನ ನೀಡಲಿದ್ದಾರೆ.
30 ನಿಮಿಷಗಳ ಸಾಮೂಹಿಕ ನೃತ್ಯ ಕಾರ್ಯಕ್ರಮದಲ್ಲಿ ಹಿಂದಿ ಜತೆಗೆ ಕನ್ನಡ ಗೀತೆಗಳನ್ನು ಅಳವಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರಿಗೆ, ಅತಿಥಿಗಳಿಗೆ, ಸ್ವಾತಂತ್ರ್ಯ ಯೋಧರಿಗೆ ಸೂಕ್ತ ಆಸನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜನರು ಹೆಚ್ಚಾಗಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾ ಕ್ರೀಡಾಂಗಣಕ್ಕೆ ವಿಶೇಷ ಬಸ್ ಸೌಕರ್ಯ ಕಲ್ಪಿಸಬೇಕು ಹಾಗೂ ತುರ್ತು ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು ಎಂದು ಹೇಳಿದರು.

ದೀಪಾಲಂಕಾರಕ್ಕೆ ಸೂಚನೆ:
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ದೀಪಾಲಂಕಾರ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಹೇಳಿದರು.
ಅದೇ ರೀತಿ ಎಲ್ಲ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಅವರ ಕುಟುಂಬದವರನ್ನೂ ಕರೆತರಬೇಕು ಎಂದರು.

ಆಕರ್ಷಕ ಪರೇಡ್:
ಸಭೆಯಲ್ಲಿ ಮಾತನಾಡಿದ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಡಿ.ಸಿ.ರಾಜಪ್ಪ ಅವರು, ಪ್ರತಿವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವದಲ್ಲಿ ಆಕರ್ಷಕ ಪರೇಡ್ ನಡೆಸಲಾಗುವುದು ಎಂದರು.
ಪರೇಡ್ ಹಾಗೂ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಪೊಲೀಸ್ ಇಲಾಖೆ ಯಶಸ್ವಿಯಾಗಿ ನಿಭಾಯಿಸಲಿದೆ ಎಂದರು.
ಇಲಾಖೆಯು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಕೆಲಸ ಮಾಡುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತ ರಾಜಪ್ಪ ಮನವಿ ಮಾಡಿಕೊಂಡರು.
ಮೇಯರ್ ಸಂಜೋತಾ ಬಾಂದೇಕರ, ಡಿಸಿಪಿ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಸಭೆಯನ್ನು ನಿರ್ವಹಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ನಗರದ ಗಣ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಲಹೆ-ಸೂಚನೆಗಳನ್ನು ನೀಡಿದರು.

Leave A Reply

 Click this button or press Ctrl+G to toggle between Kannada and English

Your email address will not be published.