ಉತ್ತಮ ಸಮಾಜಕ್ಕಾಗಿ

ಎಸ್‍ಸಿಪಿ-ಟಿಎಸ್‍ಪಿ ಪ್ರಗತಿ ಪರಿಶೀಲನೆ ನೂರರಷ್ಟು ಸಾಧನೆಗೆ ಜಿಲ್ಲಾಧಿಕಾರಿ ಸೂಚನೆ

0

ಬೆಳಗಾವಿ : ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯ ಅನುಷ್ಠಾನ ಪ್ರಗತಿಯನ್ನು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಪರಿಶೀಲನೆ ಮಾಡುವ ಮುಖಾಂತರ ನೂರಕ್ಕೆ ನೂರರಷ್ಟು ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜ.8) ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅನುಷ್ಠಾನದ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‍ಸಿಪಿ ಯೋಜನೆಯ ಅನುಷ್ಠಾನ ಡಿಸೆಂಬರ್ ಅಂತ್ಯದವರೆಗೆ ಒಟ್ಟಾರೆ ಶೇ.61ರಷ್ಟು ಆಗಿರುತ್ತದೆ. ಇನ್ನು ಕೇವಲ ಎರಡು ತಿಂಗಳು ಉಳಿದಿರುವುದರಿಂದ ಅನುದಾನದ ಸಮರ್ಪಕ ಬಳಕೆಗೆ ತ್ವರಿತಗತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಗಳ ಅನುಷ್ಠಾನದಲ್ಲಿ ಕುಂಠಿತಗೊಳ್ಳದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಬೇಕು. ಸಮಾಜ ಕಲ್ಯಾಣ ಇಲಾಖೆ ಕೂಡ ಯೋಜನೆಯ ಅನುಷ್ಠಾನ, ಕಾಮಗಾರಿಗಳ ಆಯ್ಕೆ ಅಥವಾ ಸೌಲಭ್ಯ ವಿತರಣೆಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು. ಸ್ಥಳಕ್ಕೆ ಭೇಟಿ ನೀತಿuವ ಮೂಲಕ ಕಾಮಗಾರಿಯ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಷೋಕಾಸ್ ನೋಟಿಸ್:
ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗಿದ್ದ ಪಂಚಾಯತರಾಜ್ ಎಂಜಿನಿಯರಿಂಗ್‍ನ ಬೆಳಗಾವಿ ವಿಭಾಗದ ಎಂಜಿನಿಯರ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಜಿಯಾವುಲ್ಲಾ ಸೂಚನೆ ನೀಡಿದರು.
ಪಂಚಾಯತರಾಜ್ ಎಂಜಿನಿಯರಿಂಗ್ ವಿಭಾಗವು ಶೂನ್ಯ ಪ್ರಗತಿ ತೋರಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಎಸ್‍ಸಿಪಿ/ಟಿಎಸ್‍ಪಿ ಯೋಜನೆಯ ಅನುಷ್ಠಾನಕ್ಕೆ ಈ ರೀತಿ ನಿರ್ಲಕ್ಷ್ಯ ತೋರಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆಯನ್ನು ನೀಡಿದರು.
ಔಷಧ ಸಾಮಗ್ರಿ ಖರೀದಿ ಪರಿಶೀಲಿಸಿ:
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಬೆಳಗಾವಿ ವೈದ್ಯಕೀಯ ಮಹಾವಿದ್ಯಾಲಯವು ಬರೀ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಹಾಗೂ ಪುಸ್ತಕ ನೀಡಲು ಮಾತ್ರ ಆದ್ಯತೆ ನೀಡುತ್ತಿದೆ. ಇದರ ಜತೆಗೆ ರೋಗಿಗಳಿಗೆ ಅಗತ್ಯವಿರುವ ಔಷಧ ಸಾಮಗ್ರಿ ಖರೀದಿಗೆ ಅವಕಾಶವಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಯೋಜನೆಗಳಡಿಯಲ್ಲಿ ಯಾವುದೇ ಇಲಾಖೆಯಲ್ಲಿ ಹಣ ಬಳಕೆಯಾಗದಿದ್ದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿಯಾವುಲ್ಲಾ ಎಚ್ಚರಿಕೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತರಾದ ಶಶಿಧರ ಕುರೇರ್ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮುನಿರಾಜು ಸಭೆಯನ್ನು ನಿರ್ವಹಿಸಿದರು.
ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು, ವಿಟಿಯು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ಎಲ್ಲ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.