ಉತ್ತಮ ಸಮಾಜಕ್ಕಾಗಿ

ಮತದಾರರ ಜಾಗೃತಿ ಜಾಥಾ; ಮತದಾರರ ಪಟ್ಟಿ ಪರಿಷ್ಕರಣೆಗೆ ಜ.22ರವರೆಗೆ

ಅವಕಾಶ ಎಲ್ಲರಿಗೂ ಮತದಾನದ ಹಕ್ಕು ಲಭಿಸಬೇಕು: ಜಿಲ್ಲಾಧಿಕಾರಿ ಜಿಯಾವುಲ್ಲಾ Voter awareness jatha; Until January 22 for voters list revision

0

ಮತದಾರರ ಜಾಗೃತಿ ಜಾಥಾ; ಮತದಾರರ ಪಟ್ಟಿ ಪರಿಷ್ಕರಣೆಗೆ ಜ.22ರವರೆಗೆ- Tarun krantiಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಅಥವಾ ಮತಗಟ್ಟೆ ಬದಲಾವಣೆಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಲು ನಗರದಲ್ಲಿ ಬುಧವಾರ(ಜ.17) ಮತದಾರರ ಜಾಗೃತಿ ಜಾಥಾ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಮತದಾರರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು, ನಗರದ ಬೋಗಾರವೇಸ್ ವೃತ್ತದಲ್ಲಿ ಮತದಾರರ ಜಾಗೃತಿ ಜಾಥಾಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಲಭಿಸಬೇಕು ಎಂಬುದು ಚುನಾವಣಾ ಆಯೋಗದ ಆಶಯವಾಗಿದ್ದು, ಈ ಕುರಿತು ಜಾಗೃತಿ ಮೂಡಿಸಿ 18 ವರ್ಷ ಮೇಲ್ಪಟ್ಟ ಎಲ್ಲರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಅಗತ್ಯವಿದೆ ಎಂದರು.
ಮತದಾರರ ಗುರುತಿನ ಚೀಟಿ ಇದ್ದರೆ ಸಾಲದು ಮತದಾರರ ಪಟ್ಟಿಯಲ್ಲಿ ಹೆಸರು ಕೂಡ ಇರಲೇಬೇಕಾಗುತ್ತದೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನವನ್ನು ಚುನಾವಣಾ ಆಯೋಗವು ಜನವರಿ 22ರವರೆಗೆ ವಿಸ್ತರಣೆ ಮಾಡಿರುತ್ತದೆ.
ಹದಿನೆಂಟು ವರ್ಷ ವಯೋಮಾನದ ಪ್ರತಿಯೊಬ್ಬರೂ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆಗೊಳಿಸಬೇಕು; ಮತದಾರರ ಪಟ್ಟಿಯಲ್ಲಿ ಈಗಾಗಲೇ ನೋಂದಣಿ ಮಾಡಿಸಿದವರು ತಮ್ಮ ಹೆಸರು ಇರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು; ಅದೇ ರೀತಿ ಮತದಾರನ ಹೆಸರಿನಲ್ಲಿ ತಿದ್ದುಪಡಿ ಅಗತ್ಯವಿದ್ದರೆ ಅದನ್ನು ಕೂಡ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಮತದಾರರ ಪಟ್ಟಿಗೆ ಪರಿಷ್ಕರಣೆಗೆ ಜನವರಿ 22 ಕಡೆಯ ದಿನವಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಮತದಾರರ ಜಾಗೃತಿ ಜಾಥಾ; ಮತದಾರರ ಪಟ್ಟಿ ಪರಿಷ್ಕರಣೆಗೆ ಜ.22ರವರೆಗೆ- Tarun kranti 1ಇದೇ ವೇಳೆ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್. ಅವರು, ಮತದಾನ ಪ್ರತಿಯೊಬ್ಬರ ಹಕ್ಕು ಹಾಗೂ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಭಾಗಿಯಾಗಲು ಮತದಾನ ಒಂದು ಅಪೂರ್ವ ಅವಕಾಶವಾಗಿರುವುದರಿಂದ ಹದಿನೆಂಟು ವರ್ಷ ಪೂರ್ಣಗೊಳಿಸಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೊಸದಾಗಿ ನೋಂದಣಿ, ಕಾರಣಾಂತರಗಳಿಂದ(ಮೃತರು, ವಿವಾಹವಾದ ಮಹಿಳೆಯರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಣಿ ಮಾಡಿಸಿದವರು) ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಸಬಹುದು ಎಂದು ಹೇಳಿದರು.

ಆಕರ್ಷಕ ಜಾಥಾ:
ಬೋಗಾರವೇಸ್ ವೃತ್ತದಿಂದ ಆರಂಭಗೊಂಡ ಮತದಾರರ ಜಾಗೃತಿ ಜಾಥಾ ನಗರದ ಪ್ರಮುಖ ಪ್ರದೇಶಗಳು ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಸಂಚರಿಸುವ ಮೂಲಕ ಮತದಾನದ ಮಹತ್ವವನ್ನು ಸಾರಿತು.
‘ಮತದಾನ ಮಹಾದಾನ’; ‘ಮತದಾನ ಪವಿತ್ರ ಹಕ್ಕು’, ‘ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ’ ಹಾಗೂ ‘ಮತದಾರರ ಪಟ್ಟಿಯಲ್ಲಿ ಹೆಸರು ಖಾತರಿಪಡಿಸಿಕೊಳ್ಳಿ’ ಎಂಬ ಘೋಷಣೆಗಳನ್ನು ಕೂಗುತ್ತ ಸಾಗಿದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸಾರ್ವಜನಿಕರ ಗಮನಸೆಳೆದರು.
ನಗರದ ಚೆನ್ನಮ್ಮ ವೃತ್ತದಲ್ಲಿ ಜಾಥಾ ಸಮಾರೋಪಗೊಂಡಿತು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಪಾಲಿಕೆ ಎಂಜಿನಿಯರ್ ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತದಾರರ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

Leave A Reply

 Click this button or press Ctrl+G to toggle between Kannada and English

Your email address will not be published.